ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಗುರುವಾರ ಮಧ್ಯಾಹ್ನ ಲಾಕ್‌ಡೌನ್‌ ಪರಿಹಾರ ಪ್ಯಾಕೇಜ್‌ ಘೋಷಿಸಿದರು. ಕೇಂದ್ರ ಸರ್ಕಾರದ ಘೋಷಿಸಿದ ಪ್ಯಾಕೇಜ್‌ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸ್ವಾಗತಿಸಿದ್ದಾರೆ.

ಕೊರೊನಾ ವೈರಸ್‌ ಹರಡುವುದನ್ನು ನಿಯಂತ್ರಿಸುವ ಪ್ರಧಾನಮಂತ್ರಿ ನರೇಂದ್ರ ಮೋದಿ ಮಾರ್ಚ್ 25 ರಂದು ಇಡೀ ದೇಶವನ್ನು ಏಪ್ರಿಲ್ 15ರವರೆಗೂ ಲಾಕ್‌ಡೌನ್‌ ಮಾಡುವುದಾಗಿ ಘೋಷಿಸಿದ್ದರು. ಈ ಲಾಕ್‌ಡೌನ್‌ ಈಗ ಆರ್ಥಿಕವಾಗಿ ಸಂಕಷ್ಟಕ್ಕೆ ಕಾರಣವಾಗಿದೆ.

ಕೇಂದ್ರ ಸರ್ಕಾರ ಘೋಷಿಸಿರುವ ವಿಶೇಷ ಪ್ಯಾಕೇಜ್ ಕುರಿತು ಪ್ರತಿಕ್ರಿಯಿಸಿದ ರಾಹುಲ್ ಗಾಂಧಿ ''ತುರ್ತು ಪರಿಸ್ಥಿತಿಯಲ್ಲಿ ಹಣಕಾಸಿನ ನೆರವು ನೀಡುವ ಮೂಲಕ ಕೇಂದ್ರ ಸರ್ಕಾರ ಸರಿಯಾದ ದಿಕ್ಕಿನಲ್ಲಿ ಹೆಜ್ಜೆ ಹಾಕಿದೆ. ಇದರ ಜೊತೆಗೆ ದಿನಗೂಲಿ ಕಾರ್ಮಿಕರಿಗೆ, ವೃದ್ಧರಿಗೆ, ಮಹಿಳೆಯರಿಗೆ ಸಾಲದ ಸೌಲಭ್ಯ ರೂಪಿಸಬೇಕಾಗಿತ್ತು'' ಎಂದು ಟ್ವೀಟ್ ಮಾಡಿದ್ದಾರೆ.

ಅಂದ್ಹಾಗೆ, ಲಾಕ್‌ಡೌನ್‌ನಿಂದ ದೇಶದಲ್ಲಿ ಸುಮಾರು 9 ಲಕ್ಷ ಕೋಟಿ ನಷ್ಟ ಆಗಲಿದೆ ಎಂದು ಅಂದಾಜಿಸಲಾಗಿದೆ. ಮತ್ತೊಂದೆಡೆ ಕಡೆ ಜನಜೀವನದ ಮೇಲೆ ಭಾರಿ ಪರಿಣಾಮ ಬೀರಲಿದ್ದು, ದಿನಗೂಲಿ ಕಾರ್ಮಿಕರ ದೈನಂದಿನ ಜೀವನ ಸಂಕಷ್ಟಕ್ಕೆ ಸಿಲುಕಲಿದೆ ಎಂಬ ಮುನ್ಸೂಚನೆ ಸಿಕ್ಕಿದೆ.

ಹೀಗಾಗಿ, ಮಧ್ಯಮ ವರ್ಗ ಹಾಗೂ ಬಡಜನರ ಅನೂಕೂಲಕ್ಕಾಗಿ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ 1.70 ಲಕ್ಷ ಕೋಟಿ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿದ್ದಾರೆ